ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ, ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.


ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *