ದೆಹಲಿ: ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್ಟೆಬಲ್ಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಈ ಬಾರೀ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಬರೆಯಲು ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿದೆ.
ಕಾನ್ಸ್ಟೆಬಲ್ (ಜಿಡಿ) ನೇಮಕಾತಿ ಪರೀಕ್ಷೆಗೆ ಈಗಾಗಲೇ ಸುಮಾರು ಐದು ಮಿಲಿಯನ್ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಲಿಖಿತ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆಗೆ ಅವಕಾಶವಿತ್ತು.
‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಅಧಿಕೃತ ವಕ್ತಾರರು ತಿಳಿಸಿರುವುದಾಗಿ ವರದಿ ಆಗಿದೆ.