ಕಮಲನಗರ, ಹುಲಸೂರ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಈಶ್ವರ ಖಂಡ್ರೆ

ಕಮಲನಗರ: ತಾಲ್ಲೂಕು ಕೇಂದ್ರಗಳಾಗಿರುವ ಕಮಲನಗರ ಹಾಗೂ ಹುಲಸೂರು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಬಿರಾದಾರ ಫಂಕ್ಷನ್ ಹಾಲ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನಸ್ಪಂದನ ಹಾಗೂ ಗ್ಯಾರಂಟಿ ಯೋಜನೆಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕಮಲನಗರ ತಾಲ್ಲೂಕು ಕೇಂದ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸರ್ಕಾರದಿಂದ ₹15 ಕೋಟಿ ಅನುದಾನ ಬಿಡುಗಡೆ ಮಾಡಿ ಮುಂದಿನ ವರ್ಷ ಲೋಕಾರ್ಪಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

‘ಹಿಂದಿನ ಸರ್ಕಾರ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ 40 ಸಾವಿರ ಹುದ್ದೆಗಳು ಖಾಲಿಯಿದ್ದು, ನಮ್ಮ ಸರ್ಕಾರ ಸದ್ಯದಲ್ಲಿ ಎಲ್ಲಾ ಖಾಲಿ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಜನಸ್ನೇಹಿ ಆಡಳಿತ ನಡೆಸುವ ಉದ್ದೇಶದಿಂದ ಸರ್ಕಾರ ಎಲ್ಲ ತಾಲ್ಲೂಕುಗಳಲ್ಲಿ ಈ ರೀತಿಯ ಜನಸ್ಪಂದನೆ ಸಭೆ ನಡೆಸುತ್ತಿದೆ. ಹಲವು ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲಾಗಿದ್ದು, ಉಳಿದ ಅಹವಾಲು ಕಾಲಮಿತಿಯಲ್ಲಿ ಬಗೆಹರಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿವೆ. ಪ್ರತಿಯೊಬ್ಬರ ಏಳಿಗೆಗೆ ಯೋಜನೆಗಳು ಸಹಕಾರಿಯಾಗಿದ್ದು, ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ತಿಳಿಸಿದರು.

ವಿವಿಧ ಇಲಾಖೆಯ ಒಟ್ಟು 120 ಅಹವಾಲು ಸಲ್ಲಿಕೆಯಾಗಿವೆ. ಗ್ಯಾರಂಟಿ ಯೋಜನೆಯ ಐದು ಹಾಗೂ ಕಂದಾಯ ಇಲಾಖೆಯ ಮೂರು ಒಟ್ಟು ಎಂಟು ಕೌಂಟರ್ ತೆರೆಯಲಾಗಿತ್ತು. ಸಾರ್ವಜನಿಕರು ಬೆಳಿಗ್ಗೆ 11 ಗಂಟೆಯಿಂದಲೇ ಬಂದು ಅರ್ಜಿಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಗಿರೀಶ ಬದೋಲೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ವಾನತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ತಹಶೀಲ್ದಾರ್‌ ಅಮೀತಕುಮಾರ ಕುಲಕರ್ಣಿ, ಗ್ರೇಡ್-2 ತಹಶೀಲ್ದಾರ್‌ ರಮೇಶ ಪೆದ್ದೆ, ತಾ.ಪಂ.ಇಒ ಮಾಣಿಕರಾವ ಪಾಟೀಲ್, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಮಹೇಶ ಸಜ್ಜನಶೆಟ್ಟಿ ಸೇರಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆ ಫಲಾನುಭವಿಗಳು ಹಾಜರಿದ್ದರು.

ಕಮಲನಗರದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿದರು.

Font Awesome Icons

Leave a Reply

Your email address will not be published. Required fields are marked *