ಉಡುಪಿ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿದೆ. ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದೆ. ಇನ್ನು 40 ಸಾವಿರ ಕಾರ್ಡ್ ಗಳನ್ನು ರದ್ದುಗೊಳಿಸಲು ಪರಿಶೀಲನೆ ನಡೆಸುತ್ತಿದೆ. ಇದರ ವಿರುದ್ಧ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರ ಹಾಗೂ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ, 10 ಕೆಜಿ ಅಕ್ಕಿ ನೀಡಿಲ್ಲ, ಯುವನಿಧಿ ತಲುಪಿಲ್ಲ. ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಅಂಗನವಾಡಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ವಾಲ್ಮೀಕಿ ನಿಗಮದ ನೌಕರರಿಗೆ ಸಂಬಳವಿಲ್ಲ. ಈ ನಡುವೆ ಗ್ರಾಪಂ ಆಡಳಿತಾಧಿಕಾರಿಗಳು, ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಜನ ವಿರೋಧಿ ಕಾಂಗ್ರೆಸ್ ಸರಕಾರ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ ಉಪಸ್ಥಿತರಿದ್ದರು.