ಮಂಡ್ಯ,ಜುಲೈ,31,2024 (www.justkannada.in): ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ. ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸುವುದು. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚಿಸಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರಗಳನ್ನು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Key words: water, released, KRS reservoir, public, precautions