ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 58 ಸಾವಿರ ಕೋಟಿ ಬಳಕೆ: ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮ- ಸಿಎಂ ಸಿದ್ದರಾಮಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಮೈಸೂರು ನವೆಂಬರ್ 13,2024 (www.justkannada.in): ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 58 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ ಹಾಗೂ ಅಭಿವೃದ್ದಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ. ಅಭಿವೃದ್ದಿಗೆ ಹಣದ ಕೊರತೆ ಇಲ್ಲ. ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ರೂ. 470.84 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ  ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಣೆಯನ್ನು ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ನಾವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಕರ್ನಾಟಕದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಅದರಲ್ಲಿ 1 ಲಕ್ಷದ 21 ಸಾವಿರ  ಕೋಟಿಯನ್ನು ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ.  ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 58 ಸಾವಿರ ಕೋಟಿಗಳನ್ನು ಖರ್ಚು ಮಾಡಲಾಗುತ್ತಿದೆ. ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ನಾನು 1984 ರಲ್ಲಿ ಮೊದಲ ಬಾರಿ ಮಂತ್ರಿಯಾಗಿ ಆಯ್ಕೆಯಾದೆ. ಮಂತ್ರಿಯಾಗಿ 40 ವರ್ಷಗಳಾಗಿವೆ. 2 ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು 2013 ರಲ್ಲಿ ನಾನು 165 ಭರವಸೆಗಳನ್ನು ನೀಡಿದ್ದೆವು ಅದರಲ್ಲಿ 158 ಭರವಸೆಗಳನ್ನು ಇಡೇರಿಸಿದ್ದ್ದೇವೆ ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ 325 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ.

1 ಕೋಟಿ 22 ಲಕ್ಷ ಕುಟುಂಬದ ಮಹಿಳೆಯರು ಮಾಸಿಕ 2 ಸಾವಿರ ಗೃಹ ಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿದ್ದಾರೆ. 1 ಕೋಟಿ 61 ಲಕ್ಷ  ಕುಟುಂಬಗಳು ಉಚಿತ ವಿದ್ಯುತ್ ಬಳಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಉಚಿತವಾಗಿ 5 ಕೆ ಜಿ ಅಕ್ಕಿ ಹಾಗೂ 5 ಕೆ ಜಿ ಗೆ ಹಣ ನೀಡಲಾಗುತ್ತಿದೆ. ಯುವ ನಿಧಿ ಯೋಜನೆಯಡಿ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ ಹಣ ನೀಡಲಾಗುತ್ತಿದೆ. ಒಟ್ಟಾರೆ ಒಂದು ಕುಟುಂಬಕ್ಕೆ ವಾರ್ಷಿಕ 50 ರಿಂದ 60 ಸಾವಿರ ಸೌಲಭ್ಯವನ್ನು ನೀಡಲಾಗುತ್ತಿದೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಮಾತನಾಡಿ 1985 ರಿಂದ ನನ್ನ ರಾಜಕೀಯ ಜೀವನ ಯಾತ್ರೆ ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭವಾಯಿತು. ಸಿದ್ದರಾಮಯ್ಯ ರಂತಹ ಮಹಾ ನಾಯಕರ ಜೊತೆ ಕೆಲಸ ಮಾಡುವ ಸೌಭಾಗ್ಯವನ್ನು ಕ್ಷೇತ್ರದ ಜನ ನನಗೆ ಕಲ್ಪಿಸಿ ಕೊಟ್ಟಿದ್ದೀರಿ. ಇದಕ್ಕೆ ನಾನು ಋಣಿಯಾಗಿದ್ದು, ಇದನ್ನು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕಳೆದ 40 ವರ್ಷಗಳಿಂದ ಟಿ ನರಸೀಪುರ ಕ್ಷೇತ್ರಕ್ಕೆ ಸಾವಿರಾರು ಕೋಟಿಗಳ ಅಭಿವೃದ್ದಿ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇವೆ. ವಸತಿ ಯೋಜನೆಯಡಿ 13 ಸಾವಿರ ಮನೆಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ ಅವರು ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡುತ್ತಾ  ಬಂದಿದ್ದಾರೆ. ರಾಜ್ಯದಲ್ಲಿ 14 ಬಜೆಟ್ ನ್ನು ಮಂಡಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿದ್ದಾರೆ  ಎಂದು ತಿಳಿಸಿದರು.

ದುರ್ಬಲ ವರ್ಗದ ಜನರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಹಲವು ನೀರಾವರಿ ಯೋಜನೆಗಳಿಗೆ ಅನುದಾನವನ್ನು ತರಲಾಗಿದೆ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಪ್ರಜಾಪ್ರಭುತ್ವವನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊದಿರುವ ರಾಷ್ಟ್ರ. ಯಾವುದೇ ಜಾತಿ ಧರ್ಮ ಅನುಸರಿಸಿದರೂ ನಾವೆಲ್ಲರೂ ಭಾರತೀಯರು. ನಾವೆಲ್ಲರೂ ಸೌಹಾರ್ದತೆಯಿಂದ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂದು ತಿಳಿಸಿದರು.

ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ಅವರು ಮಾತನಾಡಿ ನಮ್ಮ ಸರ್ಕಾರ ಬಂದು 1 ವರ್ಷ 5 ತಿಂಗಳು ಆಗಿದೆ. ಈ ಅವಧಿಯಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ಮಾಡುವುದರ ಜೊತೆಗೆ ಹಲವು  ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ್ದೇವೆ. ಇದಕ್ಕೆ ಸಾಕ್ಷಿ ಇಂದು ಹಲವು ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು. ಸಿದ್ದರಾಮಯ್ಯ ಅವರು ಹಿಂದುಳಿದ, ಬಡವರ, ರೈತರ ಪರ ಕೆಲಸ ಮಾಡುತ್ತಿರುವ ನಾಯಕರು. ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡುತ್ತಿದ್ದಾರೆ  ಎಂದು ತಿಳಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಅವರು ಮಾತನಾಡಿ ಈ ದಿನ ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 211 ವಿವಿಧ ಕಾಮಗಾರಿಗಳಿಗೆ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಚುನಾವಣೆಗೂ ಮುಂಚೆ ಪಂಚ ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ಅದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡಿದೆ. ಟಿ ನರಸೀಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 78 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ಪಡೆದುಕೊಳ್ಳುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಬಡವರು 3 ಹೊತ್ತು ಹೊಟ್ಟೆ ತುಂಬಾ ಊಟ ಮಾಡಲು ಸಾಧ್ಯವಾಗಿದೆ. ಕರೋನಾ ಸಂದರ್ಭದಲ್ಲಿ ಅನ್ನ ಭಾಗ್ಯ ಯೋಜನೆಯ ಮಹತ್ವ ಎಲ್ಲರಿಗೂ ಅರಿವು ಆಗಿದೆ ಎಂದು ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರಿಯ ಮುಖ್ಯಮಂತ್ರಿಗಳನ್ನು ನೀಡಿದ ಕ್ಷೇತ್ರ. ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ ನಿಮ್ಮ ಈ ಆಯ್ಕೆಗೆ ನಾನು ಆಭಾರಿಯಾಗಿದ್ದೇನೆ ಸದಾ ನಿಮ್ಮ ಸೇವೆಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಯತಿಂದ್ರ ಸಿದ್ದರಾಮಯ್ಯ ಅವರು ಮಾತನಾಡಿ 2013 ರಲ್ಲಿ ನಾವು ಚುನಾವಣೆ ಪ್ರಣಾಳಿಕೆಯಲ್ಲಿ 168 ಭರವಸೆಗಳನ್ನು ನೀಡಿದ್ದವು ಆಗ ನಾವು ಅಧಿಕಾರಕ್ಕೆ ಬಂದು 158 ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದವು. 2023 ರಲ್ಲಿ ನಾವು 5 ಗ್ಯಾರೆಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು ನಾವು ಅಧಿಕಾರಕ್ಕೆ ಬಂದ 10 ತಿಂಗಳ ಒಳಗೆ ಎಲ್ಲಾ 5 ಗ್ಯಾರೆಂಟಿ ಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದರು.

ನಾವು 5 ಗ್ಯಾರೆಂಟಿ ಗಳನ್ನು ನೀಡಿದ್ದರೂ ನಮ್ಮ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿ ಇದೆ. ನಮ್ಮ ಸರ್ಕಾರ ಅಭಿವದ್ಧಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಿದೆ. ನಮ್ಮ ರಾಜ್ಯ ಜಿಡಿಪಿ ದೇಶದ ಜಿಡಿಪಿಗಿಂತ ಹೆಚ್ಚು ಇದೆ. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ಬಡವರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಕೆ ಎಂ ಗಾಯತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: 58 thousand crores, guarantee schemes, CM Siddaramaiah

Font Awesome Icons

Leave a Reply

Your email address will not be published. Required fields are marked *