ನವದೆಹಲಿ: ‘ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಕೂಡದು. ಜೊತೆಗೆ, ಯಾವುದೇ ಸ್ತ್ರೀದ್ವೇಷ ಅಥವಾ ಯಾವುದೇ ಸಮುದಾಯ ಅಥವಾ ಲಿಂಗವನ್ನು ಉದ್ದೇಶಿಸಿ ಹೇಳಿಕೆ ನೀಡಬಾರದು’ ಎಂದು ಸುಪ್ರೀಂಕೋರ್ಟು ಎಲ್ಲ ಅಧೀನ ನ್ಯಾಯಾಲಯಗಳಿಗೆ ಎಚ್ಚರಿಸಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ‘ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ’ ಎಂದು ವ್ಯಕ್ತಪಡಿಸಿದ ಅಭಿಪ್ರಾಯ ಹಾಗೂ ಮಹಿಳಾ ವಕೀಲರೊಬ್ಬರ ಬಗ್ಗೆ ಆಡಿದ ಮಾತು ಆಧರಿಸಿ ಸ್ವಯಂಪ್ರಕರಣ ದಾಖಲಿಸಿಕೊಂಡಿದ್ದ ನ್ಯಾಯಾಲಯ, ಬುಧವಾರ ಆ ಅರ್ಜಿ ವಿಚಾರಣೆ ವೇಳೆ ಈ ಎಚ್ಚರಿಕೆ ನೀಡಿದೆ.
ಇದೇ ವೇಳೆ, ‘ತಮ್ಮ ಹೇಳಿಕೆ ಬಗ್ಗೆ ಈಗಾಗಲೇ ನ್ಯಾ। ಶ್ರೀಶಾನಂದ ಅವರು ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ಅವರು ಭಾಗಿದಾರರು ಅಲ್ಲ. ಹೀಗಾಗಿ ಪ್ರಕರಣವನ್ನು ಇಲ್ಲಿಗೇ ಮುಕ್ತಾಯಗೊಳಿಸಲಾಗುವುದು’ ಎಂದು ಮುಖ್ಯ ನ್ಯಾ। ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.