ನಂಜನಗೂಡು: ದೆಹಲಿಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದಲ್ಲಿ ಬಂಧಿಸಿರುವ ಹಿನ್ನೆಲೆಯಲ್ಲಿ ಕೂಡಲೇ ರೈತರನ್ನು ಬಿಡುಗಡೆಗೊಳಿಸಬೇಕು ಎಂದು ನಂಜನಗೂಡು ನಗರದ ಮೈಸೂರು ಮುಖ್ಯ ರಸ್ತೆಯ ಅಪೋಲೊ ಸರ್ಕಲ್ ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರೈತರು ರಸ್ತೆ ತಡೆದು ಧಿಡೀರ್ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರ ಮತ್ತು ಮಧ್ಯಪ್ರದೇಶದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ವಿಜಯೇಂದ್ರ ಮಾತನಾಡಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಬಂಧಿಸಿದ್ದಾರೆ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ. ಸ್ವಾಮಿನಾಥನ್ ಆಯೋಗದಂತೆ ಬೆಲೆ ನಿಗದಿಯಾಗಬೇಕು. ಕಬ್ಬು ಬೆಳೆಯ ಬಾಕಿ ಹಣವನ್ನು ನೀಡಬೇಕು. ಮಳೆ ಇಲ್ಲದೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು. ಕೂಡಲೇ ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಬೇಕು ಇಲ್ಲವಾದಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.