ನಂಜನಗೂಡು: ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಸಾಲುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಲುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ಬಿಸಿಯೂಟ ಅಡುಗೆಯನ್ನು ತಯಾರು ಮಾಡಲಾಗಿತ್ತು. ಬಿಸಿಯೂಟ ಸೇವಿಸಿದ ನಂತರ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಶಾಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ ಡಿ.ಹೆಚ್.ಒ ಡಾ.ಕುಮಾರಸ್ವಾಮಿ, ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ತಿ.ನರಸೀಪುರ ತಹಶೀಲ್ದಾರ್ ಸುರೇಶ್ ಆಚಾರ್, ಭೇಟಿ ನೀಡಿ, ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ.
ಸಿಎಂ ಕ್ಷೇತ್ರವಾಗಿರುವ ಕಾರಣ ಗೌಪ್ಯತೆ ಕಾಪಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಗ್ರಾಮಸ್ಥರು ಮುಖ್ಯ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಯಾವುದೇ ರೀತಿ ತೊಂದರೆ ಆಗಿಲ್ಲ. ತರಕಾರಿಯನ್ನು ಕಂಡು ಹಲ್ಲಿ ಬಿದ್ದಿದೆ ಎಂದು ವದಂತಿ ಹಬ್ಬಿಸಿದ್ದಾರೆ. ಮಕ್ಕಳು ಎಲ್ಲರೂ ಆರೋಗ್ಯವಾಗಿದ್ದಾರೆ ಅವರನ್ನು ಮನೆಗೆ ಕಳುಹಿಸಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಮಾಹಿತಿ ನೀಡಿದ್ದಾರೆ.