ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಚಾಮರಾಜನಗರ:  ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು ಪುನೀತರಾದರು. ಅಮವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಭಕ್ತರು ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು.

ದೇವಸ್ಥಾನದ ಮುಂಭಾಗ ಹಾಗೂ ರಂಗಮಂದಿರ ಸೇರಿದಂತೆ ಇತರೆ ಕಡೆಗಳಲ್ಲಿ ಬಿಡಾರ ಹೂಡಿದ್ದ ಭಕ್ತರು ಮಾದಪ್ಪನ ಗೀತೆಗಳನ್ನು ಹಾಡುತ್ತ ಉಘೇ ಮಾದಪ್ಪ ಎಂಬ ಜೈಕಾರಗಳನ್ನು ಹಾಕಿದರು.

ಅಮಾವಾಸ್ಯೆ ಪ್ರಯುಕ್ತ ಬುಧವಾರ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಮಾದಪ್ಪನಿಗೆ ವಿವಿಧ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಹರಕೆ ಹೊತ್ತ ಭಕ್ತರು ಹುಲಿವಾಹನ, ಬಸವ ವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳಲ್ಲಿ ಪಾಲ್ಗೊಳ್ಳುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ಮುಡಿಸೇವೆ. ಉರುಳುಸೇವೆ, ಪಂಜನಸೇವೆ ನೆರವೇರಿಸಿದರು. ದೇವಸ್ಥಾನದ ಹೊರಗೆ ಧೂಪ ಹಾಕಿ ನಮಿಸಿದರು.

ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಮಾದಪ್ಪನ ದರ್ಶನ ಪಡೆದರು. ಭಕ್ತರಿಗೆ ದಾಸೋಹ ಭವನದಲ್ಲಿ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು.

ಅಲ್ಲದೇ ದೇವರ ದರ್ಶನಕ್ಕೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು, ತುಮಕೂರು ಸೇರಿದಂತೆ ಹೊರ ರಾಜ್ಯಗಳಿಂದಲೂ ಭಕ್ತರು ಬೆಟ್ಟಕ್ಕೆ ಆಗಮಿಸಿದರು. ಬೆಟ್ಟಕ್ಕೆ ಬರುವ ಭಕ್ತರಿಗೆ ಕೊಳ್ಳೇಗಾಲ, ಚಾಮರಾಜನಗರ ಸೇರಿದಂತೆ ಇತರೆ ಕಡೆಗಳಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬೆಟ್ಟಕ್ಕೆ ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದರು. ಬೆಟ್ಟದಲ್ಲಿರುವ ಅಂಗಡಿ ಮಳಿಗೆಗಳಲ್ಲಿ ಸಿಹಿ ತಿನಿಸು ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Font Awesome Icons

Leave a Reply

Your email address will not be published. Required fields are marked *