ಬೆಂಗಳೂರು,ಸೆಪ್ಟಂಬರ್,24,2024 (www.justkannada.in): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಇಡೀ ವಿದ್ಯಮಾನಗಳ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ನ್ಯಾಯಾಲಯವು ಪ್ರಾಥಮಿಕ ತನಿಖೆಗೆ ಅನುಮತಿ ಕೊಟ್ಟಿದೆಯೇ ವಿನಾಃ ಪ್ರಾಸಿಕ್ಯೂಷನ್ ಗೆ ಅಲ್ಲ . ಹೈಕೋರ್ಟ್ ತೀರ್ಪನ್ನು ನಾವು ರಾಜಕೀಯವಾಗಿಯೂ ಕಾನೂನಿನ ದೃಷ್ಟಿಯಿಂದಲೂ ಎದುರಿಸಲಿದ್ದೇವೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಮುಗಿದಿದ್ದರೂ ರಾಜ್ಯಪಾಲರು ಅವುಗಳ ಬಗ್ಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಆದರೆ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದೆಂತಹ ನೈತಿಕತೆ ಎಂದು ಪ್ರಶ್ನಿಸಿದರು.
ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರು ಜಾಮೀನಿನ ಮೇಲೆ ಓಡಾಡುತ್ತಿದ್ದಾರೆ. ಆದರ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಮ ಕೈಗೊಳ್ಳುವ ಮೂಲಕ ಬಹಳ ಸೆಲೆಕ್ಟೀವ್’ ಆಗಿ ವರ್ತಿಸುತ್ತಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ. ನಾವೆಲ್ಲರೂ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುತ್ತೇವೆ. ಮುಂದಿನ ನಿರ್ಧಾರದ ಬಗ್ಗೆ ಸಿದ್ದರಾಮಯ್ಯ ತೀರ್ಮಾನ ಮಾಡಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
Key words: CM Siddaramaiah, no role, Muda scam, minister, MB Patil