ರಾಗಿಗೆ 4290 ರೂ ಬೆಂಬಲ ಬೆಲೆ ನಿಗದಿ

ಬೆಂಗಳೂರು ಗ್ರಾ: ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಕ್ವಿಂಟಾಲ್ ರಾಗಿಗೆ 4290ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ.

ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು.

ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಸೂಚಿಸಿದರು. ಡಿಸೆಂಬರ್ 01ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು ಜನವರಿ ಮಾಹೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಲಿದೆ.

ಹಾಗಾಗಿ ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ, ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಜಿ.ಶಂಕರಮೂರ್ತಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *