ದೆಹಲಿ: ಈ ಬಾರಿ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಹಾಗೂ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಈ ಚುನಾವಣಾ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ ಎಂದು ಹೇಳಿದರು.
ನಮ್ಮ ಸರ್ಕಾರ ಜಮ್ಮು-ಕಾಶ್ಮೀರದಲ್ಲಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದರು.
ಈ ಸಭೆಯಲ್ಲಿ ಸಿಎಎ ಬಗ್ಗೆ ಮಾತನಾಡಿದ ಅಮಿತ್ ಶಾ, ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ) 2019ರಲ್ಲಿ ಜಾರಿಗೊಳಿಸಲಾದ ಕಾನೂನು, ಈ ಕಾನೂನಿಗೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಲಾಗುವುದು, ಲೋಕಸಭೆ ಚುನಾವಣೆಗೂ ಮುನ್ನ ಭಾರತದಾದ್ಯಂತ ಜಾರಿಗೆ ತರಲಾಗುವುದು. ಈ ಕಾನೂನಿನ ಬಗ್ಗೆ ನಮ್ಮ ಮುಸ್ಲಿಂ ಸಹೋದರರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿದೆ. ಈ ಕಾನೂನಿನ ಮೂಲಕ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.