ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಂದ ಕರ್ನಾಟಕ ಸರ್ಕಾರವು ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದು ಒದಗಿಸಿದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಒದಗಿಸಿಕೊಡುವುದಾಗಿ ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಮೇಕೆದಾಟು ಅಣೆಕಟ್ಟೆ ನಿರ್ಮಾಣವು ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಿಂದ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯ ಅಗತ್ಯವನ್ನು ಪೂರೈಸುವುದಕ್ಕಾಗಿ ಕರ್ನಾಟಕ ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಮಿಳುನಾಡು ಸರ್ಕಾರದಿಂದ ಮೇಕೆದಾಟು ಯೋಜನೆಗೆ ಎನ್ಒಸಿ ಪಡೆಯಲಿ. ‘ಇಂಡಿಯಾ’ ಬ್ಲಾಕ್ ಅಡಿಯಲ್ಲಿ ಕಾಂಗ್ರೆಸ್ ಹಗೂ ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಸ್ವಲ್ಪ ಸುಲಭವಾಗಬಹುದು. ಹಾಗೆ ಮಾಡಿದರೆ, ಕೇಂದ್ರ ಸರ್ಕಾರದಿಂದ ನಾವು ಯೋಜನೆಗೆ ಅನುಮತಿ ಪಡೆಯುತ್ತೇವೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಸೂರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ ಸ್ಥಾಪನೆಯ ಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ ಸೂರ್ಯ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಸಲಹೆಯಂತೆ ಅಮೆರಿಕದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಪ್ರಸ್ತಾಪವನ್ನು ಅನುಸರಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಕಡೆಯಿಂದ ಇರು ಎಲ್ಲ ಅಡೆತಡೆಗಳನ್ನೂ ನಿರ್ಮೂಲನೆ ಮಾಡಲಾಗಿದೆ. ಸದ್ಯ ಕಾನ್ಸುಲೇಟ್ ಸ್ಥಾಪನೆ ವಿಚಾರ ರಾಜ್ಯ ಸರ್ಕಾರದ ಅಂಗಳದಲ್ಲಿದೆ ಎಂದು ಹೇಳಿದ್ದಾರೆ.