15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಸಿಎಂ ಹೇಳಿದ್ದಾರೆ- ಆರ್.ಅಶೋಕ್ ಆರೋಪ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ನವೆಂಬರ್‌ 9, 2024 (www.justkannada.in): ವಕ್ಫ್‌ ಮಂಡಳಿ ಬಡವರ ಭೂಮಿ ಕಬಳಿಸುತ್ತಿರುವುದರಿಂದ ಎಲ್ಲರೂ ಭೀತಿಗೊಳಗಾಗಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಇದರ ನೇತೃತ್ವ ವಹಿಸಿದ್ದಾರೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್  ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯನವರು ನೋಟಿಸ್‌ ವಾಪಸ್‌ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ ಎಂದು ದೂರಿದರು.

ಟಿಪ್ಪು ಸುಲ್ತಾನ್‌ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್‌ ವಕ್ಫ್‌ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್‌.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್‌ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್‌ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರು.

ರಾಜಕೀಯ ಪ್ರೇರಿತ

ಕಾಂಗ್ರೆಸ್‌ ಸರ್ಕಾರ ಎಲ್ಲಕ್ಕೂ ಎಸ್‌ಐಟಿ ರಚಿಸುತ್ತಿದೆ. ಸಿದ್ದರಾಮಯ್ಯನವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಿದ್ದು, ಅದರ ವರದಿ ಬಂದೇ ಇಲ್ಲ. ಕೋವಿಡ್‌ ಸಮಯದಲ್ಲಿ ಬಿ.ಎಸ್‌.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದರು.

ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾವು ಆಡಳಿತ ಪಕ್ಷದಲ್ಲಿದ್ದಾಗ ಸಮಾಧಾನ ಚಿತ್ತದಿಂದ ಎಲ್ಲವನ್ನೂ ನಿರ್ವಹಿಸುತ್ತಿದ್ದೆವು. ಆದರೆ ಈ ಸರ್ಕಾರ ಎಲ್ಲಕ್ಕೂ ಹಿಂದಿನವರೇ ಕಾರಣ ಎಂದು ಆರೋಪ ಮಾಡುತ್ತಿದೆ ಎಂದರು.

Key words:  CM, write, properties, Waqf Board, R. Ashok

Font Awesome Icons

Leave a Reply

Your email address will not be published. Required fields are marked *