ಡಿಸಿ, ಸಿಇಓಗಳ ಜೊತೆ ಸಭೆ: ಮಳೆಹಾನಿ ಕುರಿತು ಮಾಹಿತಿ ಪಡೆದು ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಅಕ್ಟೋಬರ್, 26,2024 (www.justkannada.in): ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ  ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.

2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಈ ಕೆಳಕಂಡ ಸೂಚನೆಗಳನ್ನ ನೀಡಿದರು.

ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು.

ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು.  ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ.

ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ. 2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ.

ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ  ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.  ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ಸೂಚಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ,  ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ , ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು  ಉಪಸ್ಥಿತರಿದ್ದರು.

Key words: Meeting, DC, CEOs,  CM Siddaramaiah, rain damage

Font Awesome Icons

Leave a Reply

Your email address will not be published. Required fields are marked *