ಮಂಡ್ಯ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯು ಡಿಸೆಂಬರ್ 7 ಹಾಗೂ ಡಿಸೆಂಬರ್ 8 ರಂದು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಮಂಡ್ಯ ಮತ್ತು ಮದ್ದೂರು ಉಪಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ -150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಜಿಲ್ಲೆಯಲ್ಲಿ ಡಿಸೆಂಬರ್ 7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮಂಡ್ಯದಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರದಲ್ಲಿ 7,405 ಅಭ್ಯರ್ಥಿಗಳು ಬರೆಯಲಿದ್ದಾರೆ.
ಡಿಸೆಂಬರ್ 8 ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯವರೆಗೆ ಪತ್ರಿಕೆ – 1(ಸಾಮಾನ್ಯ ಜ್ಞಾನ) ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ – 2(ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ) ನ್ನು ಮಂಡ್ಯದಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರದಲ್ಲಿ 10,557 ಅಭ್ಯರ್ಥಿಗಳು ಹಾಗೂ ಮದ್ದೂರಿನಲ್ಲಿ 6 ಪರೀಕ್ಷಾ ಕೇಂದ್ರದಲ್ಲಿ 1,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಂಡ್ಯ ಹಾಗೂ ಮದ್ದೂರು ಸೇರಿದಂತೆ ಒಟ್ಟು 26 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 12,477 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ವಿಶೇಷವಾಗಿ ಮಂಡ್ಯ ವಿಶ್ವ ವಿದ್ಯಾನಿಲಯದಲ್ಲಿ ದಿವ್ಯಾಂಗ ಚೇತನರು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡ ಹಾಗೂ ಪಿ ಇ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತೃತೀಯಲಿಂಗಿ (ಟ್ರಾನ್ಸ್ ಜೆಂಡರ್) ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಲೋಕಸೇವಾ ಆಯೋಗದಿಂದ ಪರೀಕ್ಷಾ ಕೇಂದ್ರಗಳಿಗೆ ಜಾಮಾರ್ ಅಳವಡಿಕೆ, ಸಿಸಿಟಿವಿ ಅಳವಡಿಕೆ, Face recognition ಮತ್ತು Frisking ಕಾರ್ಯನಿರ್ವಹಣೆಯ ವ್ಯವಸ್ಥೆ ಮಾಡಲಾಗಿದೆ ಎಂದರು. ಪರೀಕ್ಷಾ ಮೇಲ್ವಿಚಾರಕರು ಎಚ್ಚರವಹಿಸಿ ಪರೀಕ್ಷಾ ನಿಯಮಗಳನ್ನು ಪಾಲಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಿ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಮಂಡ್ಯ ಬಿ.ಇ.ಒ ಮಹದೇವ, ಮದ್ದೂರು ಬಿಇಒ ಕಾಳಿರಯ್ಯ, ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕಿ ಡಾ ರೋಹಿಣಿ ಸೇರಿದಂತೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.