SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಕಾಂಗ್ರೆಸ್ ಸರ್ಕಾರ: ಹೆಚ್​ಡಿಕೆ

ಬೆಂಗಳೂರು: ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಸರ್ಕಾರ ಕೈ ಹಾಕಿದೆ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು, ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನೂ ಲಗತ್ತಿಸಿದ್ದಾರೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸ್​ಎಸ್​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿದೆ. ವಸೂಲಿ ಮಾಡಿದ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Font Awesome Icons

Leave a Reply

Your email address will not be published. Required fields are marked *